ಬೆಂಗಳೂರು ಹಾಗೂ ಕರ್ನಾಟಕದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರಿಗೆ ಅಗತ್ಯ ಮಾಹಿತಿ ಮತ್ತು ನೆರವು ನೀಡಲು ಮತದಾರರ ಸಹಾಯ ಕೇಂದ್ರಗಳನ್ನು (Voter Facilitation Centres – VFCs) ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ ಮತದಾರರ ಪಟ್ಟಿಗೆ ಸಂಬಂಧಿಸಿದ ಗೊಂದಲಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ಹೊಂದಲಾಗಿದೆ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ SIR-2026 ಕಾರ್ಯಕ್ರಮದ ಭಾಗವಾಗಿ, ಬೆಂಗಳೂರು ದಕ್ಷಿಣ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ (ದಕ್ಷಿಣ) ವ್ಯಾಪ್ತಿಯಲ್ಲಿ ಒಟ್ಟು 98 ಮತದಾರರ ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರಿನ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್, ಮತದಾರರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ತಾಂತ್ರಿಕ ನೆರವು ಒದಗಿಸಲು ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಸೇವೆಗಳಿಗಾಗಿ ಈ ಕೇಂದ್ರಗಳನ್ನು ಬಳಸಿಕೊಳ್ಳಬಹುದು.









