ಮಂಡ್ಯ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಜಿಲ್ಲೆಯಲ್ಲಿ 4 ECMP ಕಿಟ್ಗಳೊಂದಿಗೆ ಆಧಾರ್ ಸೇವಾ ಕೇಂದ್ರ ಸ್ಥಾಪಿಸಲು ಅನುಮೋದನೆ ನೀಡಿದೆ. ಈ ವಿಷಯವನ್ನು ಹಂಚಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದು ಮಂಡ್ಯ ಜನತೆಗೆ ಸಂತಸದ ಸುದ್ದಿ ಎಂದು ತಿಳಿಸಿದ್ದಾರೆ. ಈಚೆಗೆ ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪಿಸುವಂತೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ತಳಮಟ್ಟದಲ್ಲಿ ಜನರಿಗೆ ಸುಲಭವಾಗಿ, ವೇಗವಾಗಿ ಹಾಗೂ ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಸೇವೆಗಳನ್ನು ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಡ್ಯದಲ್ಲಿ ಆರಂಭವಾಗಲಿರುವ ಈ ಆಧಾರ್ ಸೇವಾ ಕೇಂದ್ರದಿಂದ ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಇತರೆ ಸೇವೆಗಳು ಒಂದೇ ಸ್ಥಳದಲ್ಲಿ ಲಭ್ಯವಾಗಲಿವೆ. ಜಿಲ್ಲೆಯ ಜನರಿಗೆ ಇದರಿಂದ ಸಮಯ ಮತ್ತು ಶ್ರಮ ಉಳಿತಾಯವಾಗಲಿದ್ದು, ಆಧಾರ್ ಸಂಬಂಧಿತ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಅವಕಾಶ ದೊರೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.










