ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಗಸ್ಟ್ 1ರಿಂದ ಆರಂಭವಾಗಲಿರುವ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನದ ಅಂಗವಾಗಿ ನಗರದ ಪಾದಚಾರಿ ಮಾರ್ಗಗಳಲ್ಲಿರುವ ಬೆಸ್ಕಾಂಗೆ ಸಂಬಂಧಿಸಿದ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ ಕಾರ್ಯಾಚರಣೆ ಆರಂಭಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಪಾದಚಾರಿ ಮಾರ್ಗಗಳಲ್ಲಿರುವ ಬೆಸ್ಕಾಂ ಅಡೆತಡೆಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಕುರಿತು ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಸಚಿವರು, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಪಾದಚಾರಿ ಮಾರ್ಗಗಳನ್ನು ಒದಗಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಬೆಸ್ಕಾಂಗೆ ಸಂಬಂಧಿಸಿದ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಮತ್ತು ಇತರೆ ಅಡೆತಡೆಗಳನ್ನು ಗುರುತಿಸಿ, ಸ್ವಚ್ಛತಾ ಅಭಿಯಾನದ ಅವಧಿಯಲ್ಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಗರವನ್ನು ಹೆಚ್ಚು ಸ್ವಚ್ಛ ಹಾಗೂ ಪಾದಚಾರಿಗಳಿಗೆ ಅನುಕೂಲಕರವಾಗಿಸಲು ಸರ್ಕಾರ ಕ್ರಮ ಕೈಗೊಂಡಿದೆ.










