ತಮಿಳುನಾಡಿನ ಹಕ್ಕುಗಳು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸುವ ವಿಷಯದಲ್ಲಿ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ವಿಜಯ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಹಿತಕ್ಕಾಗಿ ಅಗತ್ಯವಿದ್ದರೆ ಯಾವುದೇ ಟೀಕೆ ಅಥವಾ ಅವಮಾನವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಅವರು ತಮಿಳುನಾಡು ವಿಧಾನಸಭೆಯಲ್ಲಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದೊಂದಿಗೆ ಮಾತುಕತೆ ನಡೆಸುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. ಯಾವುದೇ ಸಮಸ್ಯೆ ಅಥವಾ ವಿವಾದವನ್ನು ಸಂವಾದ ಮತ್ತು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವುದು ಪ್ರಜಾಪ್ರಭುತ್ವದ ಸರಿಯಾದ ಮಾರ್ಗವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯಗಳ ನಡುವೆ ಇರುವ ಸೂಕ್ಷ್ಮ ವಿಚಾರಗಳನ್ನು ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಹೇಳಿದ ವಿಜಯ್, ತಮಿಳುನಾಡಿನ ಹಕ್ಕುಗಳನ್ನು ಕಾಪಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.










