ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಫೈವ್‌ಸ್ಟಾರ್ ಹಾಗೂ ತ್ರೀಸ್ಟಾರ್ ಹೋಟೆಲ್‌ಗಳಲ್ಲಿ ಗುಣಮಟ್ಟವಿಲ್ಲದ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಶುಕ್ರವಾರ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ನಗರದ 60 ಪ್ರಮುಖ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ಪರಿಶೀಲನೆ ನಡೆಸಿದ ವೇಳೆ ನೂರಾರು ಕಿಲೋ ಗ್ರಾಂನಷ್ಟು ಹಳಸಿದ ಮಾಂಸ, ಕೊಳೆತ ತರಕಾರಿಗಳು ಹಾಗೂ ಗುಣಮಟ್ಟದ ಬಗ್ಗೆ ಅನುಮಾನ ಮೂಡಿಸಿರುವ ಪಾನೀಯಗಳನ್ನು ಅಧಿಕಾರಿಗಳು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಸ್ಟಾರ್ ಹೋಟೆಲ್‌ಗಳಲ್ಲಿ ಪೂರೈಕೆಯಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆ ಈ ಕಾರ್ಯಾಚರಣೆ ಕೈಗೊಂಡಿದೆ.
ಕಾರ್ಯಾಚರಣೆಗಾಗಿ ಒಟ್ಟು 30 ವಿಶೇಷ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ವಸಂತನಗರ, ಅರಮನೆ ರಸ್ತೆ, ಕುಮಾರಕೃಪಾ ರಸ್ತೆ, ಯಶವಂತಪುರ, ವೈಟ್‌ಫೀಲ್ಡ್, ಇಂದಿರಾನಗರ ಮತ್ತು ಕೋರಮಂಗಲ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿರುವ ಐಷಾರಾಮಿ ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ನಿಯಮ ಉಲ್ಲಂಘನೆ ಕಂಡುಬಂದ ಹೋಟೆಲ್‌ಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.










