ಈಜೀಪುರ ಮೇಲ್ಸೇತುವೆ ಹಾಗೂ ರಸ್ತೆ ಕಾಮಗಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಹೊಸ ಡೆಡ್‌ಲೈನ್ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಮಗಾರಿಯಿಂದ ತೊಂದರೆ ಅನುಭವಿಸುತ್ತಿರುವ ಆಸ್ತಿದಾರರಿಗೆ ಸಣ್ಣ ಗುಡ್‌ನ್ಯೂಸ್ ಕೂಡ ಸಿಕ್ಕಿದೆ. ಕಾಮಗಾರಿಯನ್ನು ತ್ವರಿತಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಸ್ತೆ ಸಂಪರ್ಕವನ್ನು ಸುಧಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಈಜೀಪುರ ಬಳಿ ನಡೆಯುತ್ತಿರುವ ಬಫರ್ ರಸ್ತೆ ಕಾಮಗಾರಿಗೆ ಹೆಚ್ಚಿನ ವೇಗ ನೀಡುವಂತೆ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಲೋವರ್ ಅಗರಂ ಜಂಕ್ಷನ್‌ನಿಂದ ಈಜೀಪುರ ರಸ್ತೆಯವರೆಗೆ ಸುಮಾರು 5.45 ಕಿ.ಮೀ. ಉದ್ದದ ಬಫರ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇದನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಜಿಬಿಎ ವ್ಯಾಪ್ತಿಯ ದಕ್ಷಿಣ ನಗರ ಪಾಲಿಕೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯ ಆಯುಕ್ತರು ಈ ನಿರ್ದೇಶನ ನೀಡಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಳಿಕ ಈಜೀಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದ್ದು, ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಾಮಗಾರಿಯನ್ನು ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.










