ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ರಾಜ್ಯದಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಕೆಪಿಎಸ್‌ಸಿಯಿಂದ ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕರ್ನಾಟಕದ ವಿವಿಧೆಡೆ ಹಾಗೂ ಗುಜರಾತ್‌ನ ಅಹಮದಾಬಾದ್ ಸೇರಿದಂತೆ ಒಟ್ಟು 21 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.
ದಾಳಿ ವೇಳೆ ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಆರೋಪಗಳಿಗೆ ಸಂಬಂಧಿಸಿದಂತೆ ನಡೆದಿರುವ ಈ ಕಾರ್ಯಾಚರಣೆ ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.










