ನೇಪಾಳದಲ್ಲಿ ಸಂಭವಿಸಿದ ರಣಭೀಕರ ಪ್ರವಾಹದಲ್ಲಿ 288 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಪ್ರವಾಹದಿಂದ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯಾಗಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ.
ಈ ದುರಂತದಲ್ಲಿ ಇದುವರೆಗೆ 270 ಮಂದಿ ಮೃತಪಟ್ಟಿದ್ದು, ಸಾವಿರಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪ್ರವಾಹದಿಂದ ಸಂಪರ್ಕ ವ್ಯವಸ್ಥೆ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಹಾನಿಯಾಗಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾಗಿರುವ ಭಾರತೀಯರ ಪತ್ತೆ ಹಾಗೂ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೇಪಾಳದ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.









