ಕರ್ನಾಟಕದಲ್ಲಿ ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸದ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಸೆಪ್ಟೆಂಬರ್ ಅರ್ಧ ತಿಂಗಳು ಕಳೆದರೂ ಉತ್ತಮ ಮಳೆಯಾಗದಿರುವುದು ಜಲಾಶಯಗಳ ಮೇಲೂ ಪರಿಣಾಮ ಬೀರಿದ್ದು, ಕಾವೇರಿ ಕೊಳ್ಳದ KRS, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ.
ಇದರಿಂದ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಲಭ್ಯತೆ ಬಗ್ಗೆ ಆತಂಕ ಎದುರಾಗಿದೆ. ಮಳೆ ಪ್ರಮಾಣ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ನೀರಿನ ನಿರ್ವಹಣೆ ಮತ್ತಷ್ಟು ಸವಾಲಾಗುವ ಸಾಧ್ಯತೆಯಿದೆ. ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಮತ್ತೊಂದೆಡೆ, ಕೃಷ್ಣಾ ಜಲಾನಯನ ಪ್ರದೇಶದ ಆಲಮಟ್ಟಿ ಹಾಗೂ ಹಿಡಕಲ್ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಆಲಮಟ್ಟಿ ಜಲಾಶಯದಲ್ಲಿ ಶೇ.99.5ಕ್ಕೂ ಹೆಚ್ಚು ನೀರು ಸಂಗ್ರಹವಾಗಿದ್ದು, ಉತ್ತಮ ಒಳಹರಿವು ಮುಂದುವರಿದಿದೆ. ಹೀಗಾಗಿ ಮುಂದಿನ ಕೆಲ ದಿನಗಳಲ್ಲಿ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ.










