ಭಾರತದ ಖ್ಯಾತ ಗಾಯಕಿ ಹಾಗೂ ಭಾರತ ರತ್ನ ಪುರಸ್ಕೃತೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಚಿತ್ರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ನಿರ್ಮಾಪಕರಾದ ಅಲ್ಲು ಅರವಿಂದ್, ರಾಕ್ಲೈನ್ ವೆಂಕಟೇಶ್ ಹಾಗೂ ಬನ್ನಿ ವಾಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಕನ್ನಡತಿ ರಶ್ಮಿಕಾ ಮಂದಣ್ಣ ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರವನ್ನು ಗೌತಮ್ ತಿನ್ನನೂರಿ ನಿರ್ದೇಶಿಸಲಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಎಂ.ಎಸ್. ಸುಬ್ಬುಲಕ್ಷ್ಮಿ ಅವರ 110ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಚೆನ್ನೈನ ಮ್ಯೂಸಿಕ್ ಅಕಾಡೆಮಿಯಲ್ಲಿ ಚಿತ್ರಕ್ಕೆ ಚಾಲನೆ ನೀಡಲಾಯಿತು.
ಖ್ಯಾತ ನಟ ಕಮಲ್ ಹಾಸನ್, ರಶ್ಮಿಕಾ ಮಂದಣ್ಣ ಅಭಿನಯದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಕುಟುಂಬದ ಸದಸ್ಯರು, ಕರ್ನಾಟಕ ಸಂಗೀತ ಕ್ಷೇತ್ರದ ಕಲಾವಿದರು ಹಾಗೂ ಚಿತ್ರರಂಗದ ಹಲವು ಗಣ್ಯರು ಉಪಸ್ಥಿತರಿದ್ದರು.









