ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಕಾರ್ಯನಿರ್ವಹಿಸುತ್ತಿರುವ ವಿವಿಧ ವಿಭಾಗಗಳು, ಸಂಸ್ಥೆಗಳು ಹಾಗೂ ಖಾಸಗಿ ವಾಣಿಜ್ಯ ಘಟಕಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನ ಕಲ್ಪಿಸಬೇಕು. ಸ್ಥಳೀಯ ಕನ್ನಡಿಗರ ಉದ್ಯೋಗದ ಹಕ್ಕನ್ನು ಗೌರವಿಸಿ, ಉದ್ಯೋಗ ನೇಮಕಾತಿಯಲ್ಲಿ ಶೇ.80ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿರುವ ಎಲ್ಲಾ ವಾಣಿಜ್ಯ ವ್ಯವಹಾರಗಳು, ಮಳಿಗೆಗಳು, ಹೋಟೆಲ್‌ಗಳು, ಆಹಾರ ಮಳಿಗೆಗಳು, ಸಾರಿಗೆ ಸೇವೆಗಳು ಸೇರಿದಂತೆ ವಿವಿಧ ವ್ಯಾಪಾರ ಮತ್ತು ಉದ್ಯಮ ಚಟುವಟಿಕೆಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಬಲವಾಗಿ ಆಗ್ರಹಿಸಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕೈಗೊಳ್ಳಬೇಕಾದ ಮುಂದಿನ ಹೋರಾಟದ ರೂಪುರೇಷೆಗಳು ಹಾಗೂ ಹಕ್ಕೊತ್ತಾಯಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿತ್ತು.
ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ, ವಿಮಾನ ನಿಲ್ದಾಣದ ಮುಖ್ಯಸ್ಥರಿಗೆ ಮನವಿ ಪತ್ರ ಹಾಗೂ ಹಕ್ಕೊತ್ತಾಯ ಪತ್ರವನ್ನ ಸಲ್ಲಿಸಲಾಯಿತು.
ವಿಮಾನ ನಿಲ್ದಾಣವು ಕರ್ನಾಟಕದ ನೆಲದಲ್ಲಿದ್ದು, ರಾಜ್ಯದ ಸಂಪನ್ಮೂಲಗಳು, ಭೂಮಿ ಹಾಗೂ ಮೂಲಸೌಕರ್ಯಗಳನ್ನ ಬಳಸಿಕೊಂಡು ಬೃಹತ್ ಪ್ರಮಾಣದಲ್ಲಿ ಬೆಳೆದಿರುವ ಈ ಸಂಸ್ಥೆಯ ಬೆಳವಣಿಗೆಯಲ್ಲಿ ಸ್ಥಳೀಯ ಕನ್ನಡಿಗರಿಗೂ ಸಮಾನ ಪಾಲು ಮತ್ತು ಅವಕಾಶಗಳು ದೊರೆಯಬೇಕು. ವಿಮಾನ ನಿಲ್ದಾಣದಲ್ಲಿ ಕೇವಲ ಉದ್ಯೋಗಾವಕಾಶಗಳಷ್ಟೇ ಅಲ್ಲದೇ, ಗುತ್ತಿಗೆ ಆಧಾರಿತ ಕೆಲಸಗಳು, ಸೇವಾ ವಲಯ, ವ್ಯಾಪಾರ, ವಾಣಿಜ್ಯ ಮಳಿಗೆಗಳ ನಿರ್ವಹಣೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನ ನಡೆಸುವ ಅವಕಾಶಗಳಲ್ಲಿಯೂ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ.
ಅಲ್ಲದೇ, ವಿಮಾನ ನಿಲ್ದಾಣದ ವಿವಿಧ ವಿಭಾಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯುವಂತೆ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಕನ್ನಡಿಗ ಯುವಕ-ಯುವತಿಯರಿಗೆ ಅಗತ್ಯ ತರಬೇತಿ ನೀಡಿ, ಅರ್ಹತೆಗೆ ಅನುಗುಣವಾಗಿ ಉದ್ಯೋಗ ಕಲ್ಪಿಸಲು ವಿಶೇಷ ನೇಮಕಾತಿ ಅಭಿಯಾನಗಳನ್ನ ಹಮ್ಮಿಕೊಳ್ಳಬೇಕು. ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಗುತ್ತಿಗೆದಾರರು ಹಾಗೂ ಖಾಸಗಿ ಸಂಸ್ಥೆಗಳಿಗೂ ಈ ನೀತಿಯನ್ನ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.
ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲದಿದ್ದರೆ, ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶವಿಲ್ಲದಿದ್ದರೆ ಅದಕ್ಕೆ ಅರ್ಥವೇನು? ಎಂಬ ಪ್ರಶ್ನೆಯನ್ನು ಮುಂದಿಟ್ಟಿರುವ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡಿಗರ ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಈ ಹೋರಾಟವನ್ನು ಕೈಗೆತ್ತಿಕೊಂಡಿದೆ.
ವಿಮಾನ ನಿಲ್ದಾಣದ ಆಡಳಿತ ಮಂಡಳಿ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಕನ್ನಡಿಗರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕನ್ನಡಿಗರ ಉದ್ಯೋಗ ಹಾಗೂ ವ್ಯಾಪಾರ ಹಕ್ಕುಗಳಿಗಾಗಿ ಹಂತ ಹಂತವಾಗಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ. ಕನ್ನಡಿಗರ ಉದ್ಯೋಗ ನಮ್ಮ ಹಕ್ಕು, ಕನ್ನಡಿಗರ ವ್ಯಾಪಾರ ನಮ್ಮ ಆದ್ಯತೆ. ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲೇಬೇಕು ಎಂದು ಒತ್ತಾಯಿಸಿದೆ.









