ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕಸದ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ತ್ಯಾಜ್ಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ರಾಜ್ಯ ಸರ್ಕಾರವೂ ಮುಜುಗರ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದ್ದು, ಬೆಂಗಳೂರಿನಲ್ಲಿ ಕಸ ಸಂಸ್ಕರಣೆಗೆ ಜಪಾನ್ ಮಾದರಿಯನ್ನು ಅಳವಡಿಸಿಕೊಳ್ಳುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ.
ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆಯ ಮೂಲಕ ನಗರಗಳ ಕಸವನ್ನು ಇಂಧನವನ್ನಾಗಿ ಪರಿವರ್ತಿಸುವ ಜಪಾನ್‌ನ ವ್ಯವಸ್ಥೆಯನ್ನು ಪರಿಶೀಲಿಸಲು ನವೆಂಬರ್ 24ರಂದು ಕರ್ನಾಟಕದ ನಿಯೋಗದೊಂದಿಗೆ ಜಪಾನ್‌ನ ಒಸಾಕಾದಲ್ಲಿರುವ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ ಭೇಟಿ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
2001ರಿಂದ ಕಾರ್ಯನಿರ್ವಹಿಸುತ್ತಿರುವ ಈ ಘಟಕವು ಎರಡು ದಹನ ಯಂತ್ರಗಳ ಮೂಲಕ ಪ್ರತಿದಿನ ಸುಮಾರು 900 ಟನ್ ನಗರ ತ್ಯಾಜ್ಯವನ್ನು ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ. ಅಲ್ಲದೆ, 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತದೆ. ಘಟಕವು ತನ್ನ ವಿದ್ಯುತ್ ಅಗತ್ಯಗಳನ್ನು ಪೂರೈಸಿಕೊಂಡು ಹೆಚ್ಚುವರಿ ವಿದ್ಯುತ್ ಅನ್ನು ಗ್ರಿಡ್‌ಗೆ ಪೂರೈಸುತ್ತದೆ. ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದ್ದಾರೆ.









