ಬೆಲೆ ಏರಿಕೆ, ಬರ ಪರಿಹಾರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಜನರ ಸಮಸ್ಯೆಗಳ ಕುರಿತು ಹೋರಾಟ ನಡೆಸುವ ಹಕ್ಕಿದೆ ಎಂದು ಹೇಳಿರುವ ಡಾ. ಜಿ. ಪರಮೇಶ್ವರ, ಕೋಟ್ಯಂತರ ಕುಟುಂಬಗಳ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರುವ ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೊದಲು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಚ್ಚಾ ತೈಲ ಬೆಲೆ ಏರಿಕೆ, ಬರ ಪರಿಹಾರ ನೀಡುವಲ್ಲಿ ವಿಳಂಬ ಹಾಗೂ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯದಂತಹ ಕೇಂದ್ರದ ನೀತಿಗಳ ವೈಫಲ್ಯದ ಹೊಣೆಯನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಅವರು ಸೋಮವಾರ ಹೇಳಿದ್ದಾರೆ. ಬಿಜೆಪಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.
ದೇಶದ ಪ್ರತಿಯೊಂದು ಕುಟುಂಬವೂ ಆಹಾರ ಪದಾರ್ಥಗಳು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ. ಕೃಷಿ ಉತ್ಪಾದನಾ ವೆಚ್ಚ ಹೆಚ್ಚಳದಿಂದ ರೈತರು, ವ್ಯಾಪಾರ ಮತ್ತು ನಿರ್ವಹಣಾ ವೆಚ್ಚ ಏರಿಕೆಯಿಂದ ಸಣ್ಣ ಉದ್ಯಮಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸಾಮಾನ್ಯ ಕುಟುಂಬಗಳಿಗೆ ಮಾಸಿಕ ಖರ್ಚು ನಿಭಾಯಿಸುವುದೇ ಸವಾಲಾಗಿದ್ದು, ಇಂತಹ ಸಂದರ್ಭದಲ್ಲಿ ಎಲ್ಲರಿಗೂ ಸಮಾನವಾಗಿ ಆರ್ಥಿಕ ರಕ್ಷಣೆ ಒದಗಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.








