ವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದ ಆ್ಯಂಟಿ ಪೇಪರ್ ಲೀಕ್ ಬಿಲ್ ಗುರುವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಮಸೂದೆಯ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರಾದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿದೆ.
ಇದಕ್ಕೂ ಮುನ್ನ ಬುಧವಾರ ಈ ಮಸೂದೆ ಲೋಕಸಭೆಯಲ್ಲೂ ಅಂಗೀಕಾರಗೊಂಡಿತ್ತು. ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಜಾರಿಗೆ ತರುವ ಉದ್ದೇಶದಿಂದ ಈ ಮಸೂದೆ ರೂಪಿಸಲಾಗಿದೆ.
ರಾಜ್ಯಸಭೆಯಲ್ಲೂ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿಗಳ ಅಂಕಿತ ದೊರೆತ ಬಳಿಕ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಹೊಸ ಕಾನೂನು ಜಾರಿಗೆ ಬಂದ ನಂತರ ಪೇಪರ್ ಲೀಕ್ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ.










