ಪಶ್ಚಿಮ ಬಂಗಾಳದ ಕೋಲ್ಕತ್ತಾದ ನೀಲ್ರತನ್ ಸಿರ್ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (NRS) 30 ವರ್ಷದ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ರೂಪಾಲಿ ಬರ್ಮನ್ ಎಂದು ಗುರುತಿಸಲಾಗಿದೆ. ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆಸ್ಪತ್ರೆಯ ಶೌಚಾಲಯದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರೂಪಾಲಿ ಅವರು ರಾತ್ರಿ ಕರ್ತವ್ಯಕ್ಕೆ ಹಾಜರಾಗಿದ್ದ ಬಳಿಕ ಶೌಚಾಲಯಕ್ಕೆ ತೆರಳಿದ್ದರು ಎನ್ನಲಾಗಿದೆ. ಬಹಳ ಸಮಯವಾದರೂ ಅವರು ಹೊರಬಾರದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಬಾಗಿಲು ತೆರೆದು ನೋಡಿದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ವೈದ್ಯರು ಪರಿಶೀಲಿಸಿದರೂ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ದೇಹದ ಮೇಲೆ ಸ್ಪಷ್ಟ ಗಾಯದ ಗುರುತುಗಳಿಲ್ಲ ಎಂದು ವರದಿಯಾಗಿದೆ. ಸಾವಿನ ಹಿಂದಿನ ನಿಜವಾದ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಯನ್ನು ಪೊಲೀಸರು ಎದುರು ನೋಡುತ್ತಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.










