ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಅನುಮತಿ ಪಡೆಯಲು ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅವರು ಆಗಸ್ಟ್ 22ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಒಳಗೊಂಡಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಪ್ರಸ್ತಾವನೆ ಸಿದ್ಧಪಡಿಸುವ ವೇಳೆ ಯಾವುದೇ ಅಂಶಗಳು ಬಾಕಿ ಉಳಿಯದಂತೆ ಅಧಿಕಾರಿಗಳು ಗಮನಹರಿಸುವಂತೆ ಸಚಿವರು ಸೂಚಿಸಿದರು.
ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸುವಂತೆ ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.










