ಯುವಕರಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆ ಕುರಿತ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಕರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯುವಕರಲ್ಲಿ ನಾಯಕತ್ವ ಗುಣ ಬೆಳೆಸಲು ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಹೆಚ್ಚಿಸಲು ಈ ಸಂಘಗಳು ಉತ್ತಮ ವೇದಿಕೆಯಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಂಘಗಳ ರಚನೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.









