ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದೀಗ ಹಾಡಹಗಲೇ ಭಾರತೀಯ ನಕ್ಷತ್ರ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 180 ಜೀವಂತ ಭಾರತೀಯ ನಕ್ಷತ್ರ ಆಮೆಗಳನ್ನು ರಕ್ಷಿಸಲಾಗಿದೆ.
ಗುಪ್ತಚರ ಮಾಹಿತಿ ಆಧರಿಸಿ ಗಾಂಧಿನಗರದಲ್ಲಿ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಸಿರು ಬಣ್ಣದ ಟ್ರಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಆಮೆಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಗ್‌ನೊಳಗೆ ಜೀವಂತ ಆಮೆಗಳು ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ಆಮೆಗಳನ್ನು ಎಲ್ಲಿಂದ ತರಲಾಗಿತ್ತು, ಎಲ್ಲಿಗೆ ಸಾಗಿಸಲಾಗುತ್ತಿತ್ತು ಹಾಗೂ ಈ ಕಳ್ಳಸಾಗಣೆ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.










