ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸ್ಪಷ್ಟನೆ ನೀಡಿದೆ.
ಬೆಂಗಳೂರು ನಗರ ಜಿಲ್ಲೆಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರೊಫೆಸರ್ ಸಿ.ಎನ್. ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧೆಡೆ ಹರಿದಾಡುತ್ತಿರುವ ಸುದ್ದಿ ಆಧಾರರಹಿತವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಸಿ.ಎನ್. ರಾವ್ ಅವರಿಗೆ ಯಾವುದೇ ನೋಟಿಸ್ ನೀಡಲಾಗಿಲ್ಲ ಎಂದು ಜಿಬಿಎ ಪುನರುಚ್ಚರಿಸಿದೆ. ಈ ಮೂಲಕ ಭಾರತ ರತ್ನ ವಿಜ್ಞಾನಿ ಸಿ.ಎನ್. ರಾವ್ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಗೊಂದಲಕ್ಕೆ ತೆರೆ ಎಳೆಯಲಾಗಿದೆ.









